
ಸಾಗರ: ಹಿರಿಯ ಸಾಹಿತಿ ಡಾ. ನಾ ಡಿಸೋಜ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇತ್ತೀಚೆಗೆ ನಾ. ಡಿಸೋಜ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ನಿನ್ನೆ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.ಹಿರಿಯ ಸಾಹಿತಿ ನಾ.ಡಿಸೋಜಾ ಅವರಿಗೆ 87 ವರ್ಷ ವಯಸ್ಸಾಗಿತ್ತು. ಡಿಸೋಜಾ ಅವರು 1937ರಲ್ಲಿ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಜನಿಸಿದ್ದರು. ನಾ. ಡಿಸೋಜಾ ಅವರು ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೊಡುಗೆ ನೀಡಿದ್ದಾರೆ.
ಇವರ ಕಥೆಗಳು ಸುರೇಶ್ ಹೆಬ್ಲೀಕರ್‌ರವರ ನಿರ್ದೇಶನದಲ್ಲಿ ‘ಕಾಡಿನ ಬೆಂಕಿ’, ಗಿರೀಶ್ ಕಾಸರವಳ್ಳಿಯವರ ನಿರ್ದೇಶನದಲ್ಲಿ ‘ದ್ವೀಪ’ ಚಲನಚಿತ್ರವಾಗಿದೆ. ‘ಕಾಡಿನ ಬೆಂಕಿ’ ಚಿತ್ರ ರಜತ ಕಮಲ ಪ್ರಶಸ್ತಿಯನ್ನೂ , ‘ದ್ವೀಪ’ ಚಿತ್ರ ‘ಸ್ವರ್ಣ ಕಮಲ’ ಪ್ರಶಸ್ತಿಯನ್ನೂ ಗಳಿಸಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಹಿರಿಮೆ ಗಳಿಸಿವೆ..
NA D'SOUZA.
